ಕೋಗಿಲೆ ಮತ್ತು ಸೋವಿಯಟ್ ರಷ್ಯಾ : ಸಾಯುತಿದೆ ನಿಮ್ಮನುಡಿ, ಓ ಕನ್ನಡದ ಕಂದರಿರ!
ಸಾಯುತಿದೆ ನಿಮ್ಮನುಡಿ, ಓ ಕನ್ನಡದ ಕಂದರಿರ,
ಹೊರನುಡಿಯ ಹೊರೆಯಿಂದ ಕುಸಿದು ಕುಗ್ಗಿ!
ರಾಜನುಡಿಯೆಂದೊಂದು, ರಾಷ್ಟ್ರನುಡಿಯೆಂದೊಂದು,
ದೇವನುಡಿಯೆಂದೊಂದು ಹತ್ತಿ ಜಗ್ಗಿ
ನಿರಿನಿಟಿಲು ನಿಟಿಲೆಂದು ಮುದಿಮೂಳೆ ಮುರಿಯುತಿದೆ,
ಕನ್ನಡಮ್ಮನ ಬೆನ್ನು ಬಳುಕಿ ಬಗ್ಗಿ!
ಕೂಗಿಕೊಳ್ಳಲು ಕೂಡ ಬಲವಿಲ್ಲ: ಮಕ್ಕಳೇ
ಬಾಯ್ಮುಚ್ಚಿ ಹಿಡಿದಿಹರು ಕೆಲವರು ನುಗ್ಗಿ!
ಮೊಲೆವಾಲಿನೊಡಗೂಡಿ ಬಂದ ನುಡಿ ತಾಯಿನುಡಿ;
ಕೊಲೆಗೈದರಮ್ಮನನೆ ಕೊಲಿಸಿದಂತೆ!
ತಾಯ್ ಮುತ್ತು ಕೊಡುವಂದು ನಿಮ್ಮ ಕೆನ್ನೆಯ ಮೇಲೆ
ಮೆರೆಯಿತದು ಪೋಣಿಸಿದ ಮುತ್ತಿನಂತೆ:
ನಿಮ್ಮ ನಲ್ಲೆಯರೊಡನೆ ನಲ್ನುಡಿಯ ನುಡಿವಂದು
ಕನ್ನಡವೆ ಕಲಿಸುವುದು ತುಟಿಗೆ ಬಂದು:
ನಡುವಂದು ನಿಮ್ಮ ಮುದ್ದಿನ ಹಸುಳೆಗಳನೆತ್ತಿ
ಕನ್ನಡವೆ ನಿಮಗೀವುದೊಲವ ತಂದು.
ಇರುವಲ್ಪ ಶಕ್ತಿಯನು ಇರುವಲ್ಪ ದ್ರವ್ಯವನು
ಪರಭಾಷೆ ಮೋಹಕ್ಕೆ ಚೆಲ್ಲಬೇಡಿ;
ಹೂಮಾಲೆ ಸೂಡಿವೆವು ಕೊರಳಿಂಗೆ ಎಂದೆನುತೆ
ನೇಣುರುಳನೆಳೆದಯ್ಯೊ ಕೊಲ್ಲಬೇಡಿ.
ಪರಕೀಯರೆಲ್ಲರಾಶೀರ್ವಾದ ಕರವೆತ್ತಿ
ಹರಸುತ್ತ ಬರುವರೈ ಮೊದಲು ಮೊದಲು;
ಕಡೆಗದುವೆ ಕುತ್ತಿಗೆಗೆ ಕರವಾಳವಾಗುವುದು;
ನಮ್ಮ ನಾಲಗೆ ನಮಗೆ ಕೀಳುತೊದಲು!
ನಿಮ್ಮ ನುಡಿ ನಿಮ್ಮ ಗಂಡಸುತನಕೆ ಹಿರಿಸಾಕ್ಷಿ;
ಗೆಲವಿದ್ದರದಕೆ ನಿಮಗಿಹುದು ಶಕ್ತಿ.
ನುಡಿ ಮಡಿದರೆಲ್ಲರೂ ಮೂಕ ಜಂತುಗಳಂತೆ;
ಬಾಲವಲ್ಲಾಡಿಪುದೆ ಪರಮ ಭಕ್ತಿ!
ಉತ್ತರದ ಕಾಶಿಯಲಿ ಕತ್ತೆ ಮಿಂದೈತರಲು
ದಕ್ಷಿಣದ ದೇಶಕದು ಕುದುರೆಯಹುದೆ?
ತಾಯಿತ್ತ ಮೊಲೆಹಾಲೆ ನಿಮ್ಮ ಮೈಗಾಗದಿರೆ
ಹೊತ್ತ ಹೊರೆ ಬಲಕಾರಿ ನೆತ್ತರಹುದೆ?
ಕಣ್ದೆರೆಯಿರೇಳಿ, ಓ ಕನ್ನಡದ ಮಕ್ಕಳಿರ,
ಗರ್ಜಿಸುವುದನು ಕಲಿತು ಸಿಂಹವಾಗಿ!
ನಖದಂಷ್ಟ್ರ ಕೇಸರಂಗಳ ಬೆಳೆಸಿ ಹುರಿಗೊಂಡು
ಶಿರವೆತ್ತಿ ನಿಂತು ಕುರಿತನವ ನೀಗಿ.
೩-೧೦-೧೯೩೫